ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ, ಮೇ 19ರಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ‘ಪ್ರಗತಿಯತ್ತ ಕರ್ನಾಟಕ’ ಸಾರ್ಥಕ ಸೇವೆಗಳ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರಿಗೆ ಮುಷ್ಕರದ ಕಾರಣದಿಂದಾಗಿ, ಈ ಹಿಂದೆ ನಿಗದಿಯಾಗಿದ್ದ ಮೇ 20ರ ಬದಲಾಗಿ ಒಂದು ದಿನ ಮುಂಚಿತವಾಗಿ ಅಂದರೆ ಮೇ 19ರಂದೇ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಜಿ.ಪರಮೇಶ್ವರ ಅವರು, “ಇದು ಕೇವಲ ಪಕ್ಷದ ಕಾರ್ಯಕ್ರಮವಲ್ಲ, ಸಂಪೂರ್ಣ ಪಕ್ಷಾತೀತ ಸರ್ಕಾರಿ ಸಮಾವೇಶ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ಸಚಿವರು ಮತ್ತು ವಿರೋಧ ಪಕ್ಷದ ನಾಯಕರನ್ನು ಖುದ್ದು ಆಹ್ವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ತುಮಕೂರು ಜಿಲ್ಲೆಯ 1.5 ಲಕ್ಷಕ್ಕೂ ಅಧಿಕ ಜನರಿಗೆ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಹಕ್ಕುಪತ್ರ ಹಾಗೂ ಪಿಂಚಣಿ ಸೌಕರ್ಯಗಳನ್ನು ವಿತರಿಸಲಾಗುವುದು. ಜೊತೆಗೆ ಜಿಲ್ಲೆಯ ₹682 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದೆ.
ವರದಿ : ನಾಗರಾಜ್ (ಕೆ.ಕಲ್ಲಹಳ್ಳಿ) ತುಮಕೂರು.
