ಒಂದೆಡೆ ಅಭಿವೃದ್ಧಿಯ ಬಗ್ಗೆ ಭಾಷಣ ಬಿಗಿಯುವ ಜನಪ್ರತಿನಿಧಿಗಳು, ಮತ್ತೊಂದೆಡೆ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿರುವ ಜನಸಾಮಾನ್ಯರು. ಹೌದು, ಕಾಳಗಿ ತಾಲೂಕಿನಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಶಾಸಕರು ಹಾಗೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಕಾಳಗಿ ತಾಲೂಕಿನ ಸುಂಟನ್ ಕ್ರಾಸ್ ಹತ್ತಿರದ ಮುಖ್ಯ ರಸ್ತೆಯ ದುಸ್ಥಿತಿ. ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಲ್ಪ ಮಳೆ ಬಂದರೂ ಸಾಕು, ಇಲ್ಲಿನ ಬೃಹತ್ ತಗ್ಗು ಗುಂಡಿಗಳಲ್ಲಿ ನೀರು ನಿಂತು ರಸ್ತೆ ಯಾವುದು, ಗುಂಡಿ ಯಾವುದು ಎಂಬುದೇ ತಿಳಿಯದಂತಾಗಿದೆ. ಈ ಮಾರ್ಗವು ಮುಖ್ಯ ರಸ್ತೆಯಾಗಿರುವುದರಿಂದ ಪ್ರತಿನಿತ್ಯ ಸಂಚರಿಸುವ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
“ನಮ್ಮ ತಾಲೂಕಿನ ಶಾಸಕರು ಎಲ್ಲಿ ಮಾಯವಾಗಿದ್ದಾರೋ ಗೊತ್ತಿಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಸಂಬಂಧಪಟ್ಟ ಅಧಿಕಾರಿಗಳ ಬಳಿ ಹೇಳಿಕೊಂಡರೂ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಎಲ್ಲರೂ ಕಣ್ಣು ಮುಚ್ಚಿ ಕುಳಿತಿದ್ದಾರೆ. ನಮ್ಮ ತಾಲೂಕಿನಲ್ಲಿ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಇದೇ ರೀತಿ ನಿರ್ಲಕ್ಷ್ಯ ಮುಂದುವರೆದರೆ ರೈತ ಸೇನೆ ಹಾಗೂ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಜನರ ಈ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ ಎಂಬುದು ಸ್ಥಳೀಯರ ಅಳಲು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಈ ನಿರ್ಲಕ್ಷ್ಯ ಹೀಗೆಯೇ ಮುಂದುವರೆದರೆ, ಮುಂಬರುವ ದಿನಗಳಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ರೈತ ಮುಖಂಡ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ಇನ್ನಾದರೂ ನಿದ್ದೆಯಲ್ಲಿರುವ ಆಡಳಿತ ಯಂತ್ರ ಎಚ್ಚೆತ್ತು, ರಸ್ತೆ ದುರಸ್ತಿಗೆ ಮುಂದಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ವರದಿ : ರಮೇಶ್ ಎಸ್ ಕುಡಹಳ್ಳಿ jk news ಕನ್ನಡ ಕಾಳಗಿ
