ಹುಮನಾಬಾದ : ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲಾ–ಕಾಲೇಜುಗಳಲ್ಲಿ ಗೌರವಪೂರ್ವಕವಾಗಿ ಆಚರಿಸಬೇಕು ಎಂದು ಹಾಲುಮತ ಸಮಾಜದ ಯುವ ಮುಖಂಡ ಮಲ್ಲಿಕಾರ್ಜುನ ಇಟ್ಗೇನೋರ್ ಆಗ್ರಹಿಸಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ಶಾಲಾ–ಕಾಲೇಜುಗಳು, ವಿವಿಧ ಇಲಾಖೆಗಳ ಕಚೇರಿಗಳು ಹಾಗೂ ಭಾರತೀಯ ಇತಿಹಾಸ ಮತ್ತು ಪರಂಪರೆಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರವನ್ನು ಇಟ್ಟು, ಪುಷ್ಪಾರ್ಚನೆ ಸಲ್ಲಿಸಿ ಅವರ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುವ ಮೂಲಕ ಗೌರವ ಸಮರ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ದೇಶಪ್ರೇಮ, ತ್ಯಾಗ, ಸಾಹಸ ಮತ್ತು ಹೋರಾಟದ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ–ಕಾಲೇಜುಗಳಲ್ಲಿ ರಾಯಣ್ಣ ಅವರ ಜೀವನ ಹಾಗೂ ಸ್ವಾತಂತ್ರ್ಯ ಹೋರಾಟದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದ್ದಾರೆ.
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯನ್ನು ಸಹ ಅರ್ಥಪೂರ್ಣವಾಗಿ ಆಚರಿಸಿ, ಅವರ ತ್ಯಾಗ ಮತ್ತು ದೇಶಭಕ್ತಿಗೆ ಗೌರವ ಸಲ್ಲಿಸಬೇಕು ಎಂದು ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ.
