ಬೀಳಗಿಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಆಚರಣೆ

ಬೀಳಗಿ: ಜಿಲ್ಲಾ ಪಂಚಾಯತ್ ಬಾಗಲಕೋಟೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಬೀಳಗಿ ಮತ್ತು ಬೀಳಗಿ ತಾಲೂಕ ಶಿಕ್ಷಕರ ದಿನೋತ್ಸವ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ದಿನಾಂಕ 05-09-2026 ರ ಶನಿವಾರ ಬೆಳಿಗ್ಗೆ 10:30ಕ್ಕೆ ಬೀಳಗಿ ಪಟ್ಟಣದ ಶ್ರೀ ಸಿದ್ದೇಶ್ವರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಹಾಗೂ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಬೆಂಗಳೂರು ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜೆ.ಟಿ. ಪಾಟೀಲ ಅವರು ವಹಿಸಿ ಮಾತನಾಡಿದರು. ಮುಂಬರುವ ದಿನಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಸ್ವಂತ ಕಟ್ಟಡದಲ್ಲಿ ಆಚರಿಸಬೇಕು, ಅದಕ್ಕೆ ಬೇಕಾದ ಎಲ್ಲಾ ಸಹಾಯ ಸೌಲಭ್ಯಗಳನ್ನು ನೀಡುತ್ತೇನೆ ಎಂದು ಅಭಯ ನೀಡಿದರು. ಸ್ವಂತ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದಿಂದ ಅಥವಾ ಮುಖ್ಯಮಂತ್ರಿಗಳ ಅನುದಾನದಿಂದ 30 ಲಕ್ಷ ರೂಪಾಯಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅನವೀರಯ್ಯ ಆರ್. ಪ್ಯಾಟಿಮಠ, ತಹಶೀಲ್ದಾರರು ಹಾಗೂ ಶಿಕ್ಷಕ ದಿನೋತ್ಸವ ಸಮಿತಿಯ ಉಪಾಧ್ಯಕ್ಷರಾದ ವಿನೋದ್ ಹತ್ತಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರ ದಿನೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಆರ್.ಎಸ್. ಆದಾಪೂರ, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಶಿಕ್ಷಕರ ದಿನೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ್ ಪಾಟೀಲ, ಸ್ವಾಗತ ಸಮಿತಿ ಅಧ್ಯಕ್ಷರಾದ ಪಡಿಯಪ್ಪ ಕಳ್ಳಿಮನಿ ಉಪಸ್ಥಿತರಿದ್ದರು.

ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಚಿಕ್ಕಮಗಳೂರಿನ ವಿಮರ್ಶಕರು ಹಾಗೂ ಉಪನ್ಯಾಸಕರಾದ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಶಿಕ್ಷಕ-ಶಿಷ್ಯರ ಸಂಬಂಧ ಹೇಗಿರಬೇಕು ಎಂಬುದರ ಕುರಿತು ಮಾರ್ಮಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

error: Content is protected !!