ಔರಾದ: ಪಟ್ಟಣಕ್ಕೆ ನೀರು ಪೂರೈಕೆ ಮಾಡುವ ಪ್ರಮುಖ ಜಲಮೂಲವಾದ ಹಾಲಹಳ್ಳಿ ಬ್ಯಾರೇಜ್‌ನಲ್ಲಿ ನೀರಿನ ಕೊರತೆ ಉಂಟಾಗಿರುವುದರಿಂದ ಪಟ್ಟಣದ ನಿಯಮಿತ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ನೀರಿನ ಕೊರತೆಯನ್ನು ನೀಗಿಸಲು ಕರಂಜಾ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರಂಜಾ ಜಲಾಶಯದಿಂದ ನೀರು ಬಿಡುಗಡೆಯಾಗಿ ಔರಾದ ಪಟ್ಟಣಕ್ಕೆ ನಿಯಮಿತ ನೀರು ಪೂರೈಕೆ ಪುನರಾರಂಭಗೊಳ್ಳಲು ಸುಮಾರು 5 ದಿನಗಳ ಕಾಲಾವಕಾಶ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ಅಲ್ಲಿಯವರೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಔರಾದ ಪಟ್ಟಣ ಪಂಚಾಯಿತಿ ವತಿಯಿಂದ ನೀರಿನ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುವುದು.
ತುರ್ತು ಸಂದರ್ಭಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆ ಇದ್ದಲ್ಲಿ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು. ಅಂತಹ ಮನವಿಗಳಿಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಟ್ಟಣ ಪಂಚಾಯಿತಿ ತಿಳಿಸಿದೆ.
ಪ್ರಸ್ತುತ ಬರ ಪರಿಸ್ಥಿತಿ ಮತ್ತು ನೀರಿನ ಅಭಾವವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಮತ್ತು ಸಹಕರಿಸಬೇಕು ಎಂದು ಮುಖ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ: ರಾಚಯ್ಯ ಸ್ವಾಮಿ, ಔರಾದ
