ಘೋಡಗೇರಿಯಲ್ಲಿ ಅದ್ಧೂರಿಯಾಗಿ ಜರುಗಿದ ಜಿಲ್ಲಾ ಮಟ್ಟದ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಮಕ್ಕಳ ಸಾಹಿತ್ಯ ಪ್ರತಿಭೆಗೆ ವೇದಿಕೆ ಕಲ್ಪಿಸಿದ ಸಮ್ಮೇಳನ

ಹುಕ್ಕೇರಿ: ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಜರುಗಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಗ್ರಾಮದ ಶಿವಾನಂದ ಮಠದ ಸಾಂಸ್ಕೃತಿಕ ವೇದಿಕೆಯಲ್ಲಿ ಸಮ್ಮೇಳನ ಆಯೋಜಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ನೂರಾರು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಮಕ್ಕಳಲ್ಲಿ ಕನ್ನಡ ಭಾಷೆಯ ಅಭಿಮಾನ, ಸಾಹಿತ್ಯದ ಆಸಕ್ತಿ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಇಂತಹ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ ಎಂದು ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಡಾ. ಪ್ರಕಾಶ ಹೊಸಮನಿ ಅಭಿಪ್ರಾಯಪಟ್ಟರು.

ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ, ಕವನ ಸಂಕಲನ, ಕವಿಗೋಷ್ಠಿ ಹಾಗೂ ಸಂವಾದಗೋಷ್ಠಿ ಸೇರಿದಂತೆ ವಿವಿಧ ಸಾಹಿತ್ಯ ಚಟುವಟಿಕೆಗಳು ನಡೆದವು. ವಿದ್ಯಾರ್ಥಿಗಳು ತಮ್ಮ ಸಾಹಿತ್ಯಿಕ ಪ್ರತಿಭೆಯನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಮಕ್ಕಳಲ್ಲಿ ಓದುವ ಹವ್ಯಾಸ, ಬರವಣಿಗೆ ಕೌಶಲ್ಯ, ಭಾಷಣ ಕಲೆ ಹಾಗೂ ಸೃಜನಶೀಲ ಚಿಂತನೆ ಬೆಳೆಸಲು ಸಮ್ಮೇಳನ ಸಹಕಾರಿಯಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು, ವಿದ್ಯಾರ್ಥಿಗಳು ಹಾಗೂ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಡಾ. ಹೇಮಾವತಿ ಸೊನೊಳ್ಳಿ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಚ.ನಂ. ಅಶೋಕ, ಗೌರವಾಧ್ಯಕ್ಷ ಡಾ. ಲಕ್ಷ್ಮಣ ಚೌರಿ, ಉಪಾಧ್ಯಕ್ಷರಾದ ಡಾ. ಪ್ರಕಾಶ ಹೊಸಮನಿ, ಸಿದ್ರಾಮ ನಿಲಜಗಿ, ಮಾಂತೇಶ ಮೆಣಸಿನಕಾಯಿ ಸೇರಿದಂತೆ ವಿದ್ಯಾರ್ಥಿಗಳು, ಪಾಲಕರು, ಸಾಹಿತ್ಯಾಸಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!