ಔರಾದ್ : ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ. ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡಲಾಗುತ್ತಿದೆ. ಈ ಕುರಿತು ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ನಿವೃತ್ತ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಜೆಜೆಎಂ ಕಾಮಗಾರಿ ಕಳಪೆ ಮಟ್ಟದಿಂದ ನಡೆಸಲಾಗಿದೆ. ಕೂಡಲೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು, ಜಿಲ್ಲಾ ಪಂಚಾಯತಿ ಅಧಿಕಾರಿಗಳು ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿ ಕುಟುಂಬಕ್ಕೆ ಶುದ್ಧ ಕುಡಿಯುವ ನೀರು ಕಲ್ಪಿಸುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿಯೇ ಸರಕಾರ ಜಲ ಜೀವನ ಮಿಷನ್ ಯೋಜನೆಯಡಿ ಔರಾದ್, ಕಮಲನಗರ ತಾಲೂಕಿನಲ್ಲಿ ೨೭೬ ಕಾಮಗಾರಿಗಳಿದ್ದು, ಸರಿಸೂಮಾರು ೨೦೦ ಕೋಟಿಗೂ ಅಧಿಕ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಆದರೆ ಅಧಿಕಾರಿಗಳ ನಿರ್ಲಕ್ಷö್ಯ ಹಾಗೂ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಅನುದಾನ ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಅನೇಕ ಕಡೆಗಳಲ್ಲಿ ಕಾಮಗಾರಿಗಳು ಆರಂಭಿಸಿಲ್ಲ. ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಲ್ಲಿವೆ ಎಂದು ಸಾಕಷ್ಟು ದೂರುಗಳಿವೆ ಎಂದು ಇಲಾಖೆಗೆ ಸಲ್ಲಿಸಿದ ಮನವಿಪತ್ರದಲ್ಲಿ ತಿಳಿಸಿದ್ದಾರೆ.
ಬಿಲ್ ತಡೆ ಹಿಡಿಯಿರಿ : ಕಾಮಗಾರಿಗಳು ಸಂಪೂರ್ಣ ಕಳಪೆ ಮಟ್ಟದಲ್ಲಿ ನಡೆಯುತ್ತಿವೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಆದ್ದರಿಂದ ಕಾಮಗಾರಿಗಳನ್ನು ಮರು ಪರಿಶೀಲನೆ ಮಾಡಿ ಗುಣಮಟ್ಟ ಕಾಯ್ದುಕೊಂಡ ಮೇಲೆ ಕಾಮಗಾರಿಯನ್ನು ಜನರಿಗೆ ಉಪಯೋಗಕ್ಕಾಗಿ ಪ್ರಾರಂಭಿಸಬೇಕು. ೩ನೇ ಪಾರ್ಟಿಯವರಿಂದ ಪರಿಶೀಲನೆ ಮಾಡಿಸುವರೆಗೆ ಗುತ್ತಿಗೆದಾರರ ಬಿಲ್ ತಡೆಹಿಡಿಯುವಂತೆ ಒತ್ತಾಯಿಸಿದರು.
ವರದಿ : ರಾಚಯ್ಯ ಸ್ವಾಮಿ