ಬೆಳೆ ಹಾನಿ: ಸಮರ್ಪಕ ಪರಿಹಾರಕ್ಕಾಗಿ ಶಾಸಕ ಪ್ರಭು ಚವ್ಹಾಣ ಆಗ್ರಹ

 

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆ ಹಾನಿಯಾಗಿದ್ದು, ಎಲ್ಲಾ ರೈತರಿಗೆ ಸಮರ್ಪಕವಾಗಿ ಪರಿಹಾರ ಕಲ್ಪಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ (ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು, ಪ್ರಸಕ್ತ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಸುರಿದ ಅತ್ಯಧಿಕ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ 7,768.70 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಹಾಗೆಯೇ 2022-23 ರಲ್ಲಿ 65,187.83 ಹೆಕ್ಟರ್, 2023-24ರಲ್ಲಿ 6438.52 ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

ಎನ್.ಡಿ.ಆರ್.ಎಫ್/ಎಸ್.ಡಿ.ಆರ್.ಎಫ್ ನಂತೆ ಬೆಳೆಹಾನಿಗೆ ಸಂಬಂಧಿಸಿದ ಪ್ರತಿ ರೈತರಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ, ಶೇ.33 ರಷ್ಟು ಹಾನಿಯಾದ ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೆರಿಗೆ 8500, ನೀರಾವರಿ ಬೆಳೆಗಳಿಗೆ ಪ್ರತಿ ಹೆಕ್ಟೆರಿಗೆ 17000 ಮತ್ತು ಬಹು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೆರಿಗೆ 22500 ಗಳ ಪರಿಹಾರವನ್ನು ನಿಗದಿಪಡಿಸಲಾಗಿದೆ. ಅರ್ಹ ರೈತರಿಗೆ ಡಿಬಿಟಿ ತಂತ್ರಾಂಶದ ಮೂಲಕ ಫ್ರೂಟ್ಸ್ ನೊಂದಾಯಿತ ಐಡಿ ಇರುವ ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

 

ಬೆಳೆ ಹಾನಿಗೆ ಸಂಬಂಧಿಸಿದಂತೆ ಸಮೀಕ್ಷಾ ಕಾರ್ಯ ಸಮರ್ಪಕವಾಗಿ ನಡೆದಿಲ್ಲವೆಂದು ರೈತರಿಂದ ದೂರುಗಳು ಬರುತ್ತಿವೆ. ಅಲ್ಲದೆ ಬಿಡುಗಡೆಯಾದ ಬೆಳೆ ಹಾನಿ ಪರಿಹಾರ ಎಲ್ಲ ರೈತರಿಗೆ ಸಮರ್ಪಕವಾಗಿ ತಲುಪಿಲ್ಲ. ಕೆಲವು ರೈತರು ಪರಿಹಾರ ಸಿಗದೆ ಕಂಗಾಲಾಗಿದ್ದಾರೆ. ಹಾಗಾಗಿ ಸಮೀಕ್ಷಾ ಕಾರ್ಯ ಸರಿಯಾಗಿ ನಡೆಸಿ ಬೆಳೆ ಹಾನಿಯಾದ ಯಾವೊಬ್ಬ ರೈತನೂ ಸರ್ಕಾರದ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕೆಂದು ಕಂದಾಯ ಸಚಿವರನ್ನು ಒತ್ತಾಯಿಸಲಾಗಿದೆ ಎಂದು ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ರಾಚಯ್ಯ ಸ್ವಾಮಿ 

error: Content is protected !!