ತಮಿಳುನಾಡು: ತೂತುಕುಡಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಇಬ್ಬರು ಸಾವು, ನಾಲ್ವರಿಗೆ ಗಾಯ

ತಮಿಳುನಾಡು :  ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತರ ನಾಲ್ವರಾದ ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಮೃತರಲ್ಲಿ ಇಬ್ಬರನ್ನು ಕಣ್ಣನ್ ಮತ್ತು ವಿಜಯ್ ಎಂದು ಗುರುತಿಸಲಾಗಿದ್ದು, ಇತರ ನಾಲ್ವರನ್ನು ಚಿಕಿತ್ಸೆಗಾಗಿ ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಾತಾಂಕುಳಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕಸ್ಮಿಕ ಸ್ಫೋಟದಲ್ಲಿ ಗೋಡೌನ್‌ನ ಸಂಪೂರ್ಣ ರಚನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಖಾಸಗಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅನಿರೀಕ್ಷಿತ ಸ್ಫೋಟದಲ್ಲಿ ಸಾವಿನ ಸುದ್ದಿ ಕೇಳಿ ನನಗೆ ಅತೀವ ನೋವಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವರದಿ : ಸದಾನಂದ