ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ

ಬೆಳಗಾವಿ : ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಕರ್ನಾಟಕದ ಅತಿ ದೊಡ್ಡ ನಗರಗಳಲ್ಲಿ ಒಂದಾದ ಬೆಳಗಾವಿ ನಗರವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಅದರೊಂದಿಗೆ ಸಂಚಾರ ದಟ್ಟಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಫ್ಲೈಓವರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಆರಂಭಿಸುವ ಮುನ್ನ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆಯನ್ನು ನಡೆಸಿದರು

ಈ ಸಭೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಟ್ರಾಫಿಕ್ ಕಂಟ್ರೋಲ್ ವಿಭಾಗ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಭಾಗವಹಿಸಿ, ಯೋಜನೆಯ ಅಂತಿಮ ಹಂತದ ರೂಪುರೇಷೆಗಳು, ಸಂಚಾರ ನಿರ್ವಹಣೆ ಮತ್ತು ತಾಂತ್ರಿಕ ಸವಾಲುಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಫ್ಲೈಓವರ್ ಕಾಮಗಾರಿಯನ್ನು ಮೂರು ಹಂತಗಳಲ್ಲಿ ಪೂರ್ಣಗೊಳಿಸುವ ಕುರಿತು ಮತ್ತು ಮೊದಲ ಹಂತದಲ್ಲಿ ರಾಣಿ ಚೆನ್ನಮ್ಮ ವೃತ್ತದಿಂದ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಿದ ಬಳಿಕ, ಮುಂದಿನ ಎರಡು ಹಂತಗಳಲ್ಲಿ ಕ್ರಮಬದ್ಧವಾಗಿ ಕಾಮಗಾರಿ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದರು

ನಿರ್ಮಾಣದ ಅವಧಿಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸುವುದು, ಇಲಾಖೆಗಳ ನಡುವೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ಹಾಗೂ ಜನಸಾಮಾನ್ಯರಿಗೆ ಮತ್ತು ಆಡಳಿತ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಯೋಜನೆಯನ್ನು ಸುಗಮವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ವರದಿ : ಸದಾನಂದ ಎಂ

error: Content is protected !!