ಬೀದರ್‌ನಲ್ಲಿ ಭರ್ಜರಿ ಪೊಲೀಸ್ ಬೇಟೆ: ಸುಮಾರು 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ, ಮಹಿಳೆ ಬಂಧನ!

ಬೀದರ್: ಜಿಲ್ಲಾ ಪೊಲೀಸ್ ಇಲಾಖೆಯು ಅಕ್ರಮ ಮಾದಕ ದ್ರವ್ಯ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೀದರ್ ನಗರದಲ್ಲಿ ಬರೋಬ್ಬರಿ 19,23,800 ರೂ. ಮಾರುಕಟ್ಟೆ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದೆ. ಈ ದಂಧೆಗೆ ಸಂಬಂಧಿಸಿದಂತೆ ಒಬ್ಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ್ ನಗರದ ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಮೇಶ್ವರ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಗಾಂಧಿಗಂಜ್ ಪಿಐ ಆನಂದರಾವ್ ಎಸ್‌ಎನ್ ಮತ್ತು ತಂಡದವರು, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಜಂಟಿ ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಶ್ರೀ ಪ್ರದೀಪ್ ಗುಂಟಿ (IPS) ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಚಂದ್ರಕಾಂತ್ ಪೂಜಾರಿ ಅವರ ನೇರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಡಿಎಸ್‌ಪಿ, ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಇಬ್ಬರು ಪಂಚರ ಸಮ್ಮುಖದಲ್ಲಿ ಸಂಗಮೇಶ್ವರ ಕಾಲೋನಿಯ ಸದರಿ ಮನೆಗೆ ಪೊಲೀಸರು ಲಗ್ಗೆ ಇಟ್ಟಿದ್ದಾರೆ. ಈ ವೇಳೆ ಮನೆಯ ಹಾಲಿನಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಾಗೂ ಬಣ್ಣದ ಟೇಪ್‌ಗಳಿಂದ ಸುತ್ತಿದ್ದ ಒಟ್ಟು 12 ಗಾಂಜಾ ಪ್ಯಾಕೆಟ್‌ಗಳು ಪತ್ತೆಯಾಗಿವೆ.

ಸ್ಥಳದಲ್ಲಿದ್ದ ಒಟ್ಟು 38 ಕೆಜಿ 476 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲಿ ವಾಸವಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಜಂಬಗಿ ತಾಂಡಾದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಲಾಭಕ್ಕೆ ಮಾರಾಟ ಮಾಡಲು ಇದನ್ನು ಸಂಗ್ರಹಿಸಿಟ್ಟಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ.

ಅಕ್ರಮವಾಗಿ ಗಾಂಜಾ ಸಂಗ್ರಹಿಸಿ, ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 96/2026, NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಮಹಿಳೆಯನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಮಯಪ್ರಜ್ಞೆ ಮೆರೆದು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿಯನ್ನು ಎಸ್‌ಪಿ ಪ್ರದೀಪ್ ಗುಂಟಿ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

error: Content is protected !!