ಬೆಂಗಳೂರು : ನ್ಯಾಯಾಲಯದ ವಿಚಾರಣೆಗೆ ನಿರಂತರವಾಗಿ ಗೈರುಹಾಜರಾದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ (ಬಿಜೆಪಿ) ಶಾಸಕ ಶರಣು ಸಲಗರ್ ಅವರಿಗೆ ಬೆಂಗಳೂರಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಇದರಿಂದಾಗಿ ಶಾಸಕರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಾದ 42ನೇ ಎಸಿಜೆಎಂ (ACJM) ಕೋರ್ಟ್ ಈ ಆದೇಶವನ್ನು ಹೊರಡಿಸಿದೆ.
ಕಳೆದ 2023ರ ಜುಲೈ 1ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಬ್ಬದ ಆಚರಣೆ ವೇಳೆ ಪ್ರಶ್ನಿಸಿ ಗಲಾಟೆ ಮಾಡಿದ್ದ ಆರೋಪ ಇವರ ಮೇಲಿತ್ತು. ಈ ಕುರಿತು ಸಕ್ಷಮ ಪೊಲೀಸರು ಸುದೀರ್ಘ ತನಿಖೆ ನಡೆಸಿ, ಈಗಾಗಲೇ ನ್ಯಾಯಾಲಯಕ್ಕೆ ಅಧಿಕೃತವಾಗಿ ದೋಷಾರೋಪ ಪಟ್ಟಿಯನ್ನು (ಚಾರ್ಜ್‌ಶೀಟ್) ಸಲ್ಲಿಕೆ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸದ್ಯ ಸಾಕ್ಷ್ಯಗಳ ವಿಚಾರಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಶಾಸಕ ಶರಣು ಸಲಗರ್ ಅವರು ನ್ಯಾಯಾಲಯದ ಸಮನ್ಸ್ ಇದ್ದರೂ ವಿಚಾರಣೆಗೆ ಹಾಜರಾಗದೆ ಗೈರುಳಿದಿದ್ದರು. ಶಾಸಕರ ಈ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ 42ನೇ ಎಸಿಜೆಎಂ ನ್ಯಾಯಾಲಯವು, ಇದೀಗ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿ ಆದೇಶಿಸಿದೆ.
ಮುಂದಿನ ವಿಚಾರಣೆ ವೇಳೆ ಶಾಸಕರು ನ್ಯಾಯಾಲಯಕ್ಕೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದ್ದು, ರಾಜಕೀಯ ವಲಯದಲ್ಲೂ ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.
ವರದಿ : ಆದಿತ್ಯ ಗಜರೆ
