ಹುಣಸಗಿಯಲ್ಲಿ ನೂತನ ಬಸ್ ಡಿಪೋ, ಬಸ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರ ಟೆಂಡರ್

ಹುಣಸಗಿ: ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜಾ ವೇಣುಗೋಪಾಲ ನಾಯಕ ಅವರು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಸಚಿವರಾದ ಭೈರತಿ ಸುರೇಶ್ ಅವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹುಣಸಗಿ ಪಟ್ಟಣದಲ್ಲಿ ನೂತನ ಬಸ್ ಡಿಪೋ ಹಾಗೂ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸುವಂತೆ ಮನವಿ ಮಾಡಿದರು.

ಹುಣಸಗಿ ಪಟ್ಟಣದಲ್ಲಿ ನೂತನ ಬಸ್ ಡಿಪೋ ಮತ್ತು ಬಸ್ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಸಚಿವರ ಗಮನಕ್ಕೆ ತಂದರು. ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕಾಮಗಾರಿಯನ್ನು ಶೀಘ್ರ ಆರಂಭಿಸುವ ಅಗತ್ಯವಿದೆ ಎಂದು ಮನವರಿಕೆ ಮಾಡಿದರು.

ಶಾಸಕರ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು, ಸಾರಿಗೆ ಇಲಾಖೆಯ ಕಾರ್ಯದರ್ಶಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಹುಣಸಗಿ ನೂತನ ಬಸ್ ಡಿಪೋ ಹಾಗೂ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಶೀಘ್ರವೇ ಟೆಂಡರ್ ಕರೆದು ಕಾಮಗಾರಿ ಆರಂಭಿಸುವಂತೆ ಸೂಚಿಸಿದರು.

ನೂತನ ಬಸ್ ಡಿಪೋ ಹಾಗೂ ಬಸ್ ನಿಲ್ದಾಣ ನಿರ್ಮಾಣದಿಂದ ಹುಣಸಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಾರಿಗೆ ವ್ಯವಸ್ಥೆ ಮತ್ತಷ್ಟು ಸುಧಾರಿಸುವ ನಿರೀಕ್ಷೆ ಮೂಡಿದೆ.

ವರದಿ : ಸಿಎಂ ಮಕಾಂದರ

error: Content is protected !!