ಅಫಜಲಪುರ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ನಿರ್ಲಕ್ಷ್ಯ ಹಾಗೂ ಅವ್ಯವಹಾರಗಳ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಮುಖಂಡ ಶಿವಕುಮಾರ ನಾಟಿಕಾರ, ಶಾಸಕ ಎಂ.ವೈ. ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “224 ಶಾಸಕರ ಪೈಕಿ ಎಂ.ವೈ. ಪಾಟೀಲ್ ಅತ್ಯಂತ ಭ್ರಷ್ಟ ಶಾಸಕ” ಎಂದು ಆರೋಪಿಸಿದರು. ಕ್ಷೇತ್ರಕ್ಕೆ ಬರುವ ಸರ್ಕಾರಿ ಅನುದಾನವನ್ನು ಸಮರ್ಪಕವಾಗಿ ಬಳಸುವ ಬದಲು ಲೂಟಿ ಹೊಡೆಯುವುದೇ ಇವರ ಕಾಯಕವಾಗಿದೆ ಎಂದು ದೂರಿದರು.
ತಾಲೂಕು ಆಸ್ಪತ್ರೆಯಲ್ಲಿನ ಅವ್ಯವಹಾರ ಹಾಗೂ ನಿರ್ಲಕ್ಷ್ಯದ ಬಗ್ಗೆ ಹಲವು ಆರೋಪಗಳು ಕೇಳಿಬರುತ್ತಿದ್ದರೂ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬದಲು ಶಾಸಕರು ಅವ್ಯವಹಾರಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ನಾಟಿಕಾರ ಆರೋಪಿಸಿದರು.
ಸರ್ಕಾರದ ಅನುದಾನವನ್ನು ದುರ್ಬಳಕೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನ್ಯಾಯವಾಗುತ್ತಿದೆ. ಆಸ್ಪತ್ರೆಯಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬದಲು ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಸಾರ್ವಜನಿಕರ ಹಿತಕ್ಕಾಗಿ ಮುಂದಿನ ದಿನಗಳಲ್ಲಿಯೂ ಹೋರಾಟ ಮುಂದುವರಿಸಲಾಗುವುದು ಎಂದು ಶಿವಕುಮಾರ ನಾಟಿಕಾರ ತಿಳಿಸಿದರು.
