ಬೆಳಗಾವಿ: ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಬೆಂಕಿ ಆವರಿಸಿದೆ ಎನ್ನಲಾಗಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಒಳಗಡೆಯೇ ಸಿಲುಕಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಗಜಾನನ ದಮೋನೆ (65), ರೋಷನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಎಂದು ಗುರುತಿಸಲಾಗಿದೆ.
ಅಗ್ನಿ ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದುರಂತಕ್ಕೀಡಾದ ಕುಟುಂಬವು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಿಂದ ಚವಾಟಗಲ್ಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಕುರಿತು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
