ನವಲಿಹಾಳ: ಇಲ್ಲಿನ ಶ್ರೀ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಎಲ್. ಕೆ. ಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಆಟಗಳು, ಫನ್ ಗೇಮ್ಸ್ ಹಾಗೂ ವಿನೂತನ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಎಲ್ಲಾ ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಲೆಯ ಸಂಸ್ಥಾಪಕರು ಹಾಗೂ ಶ್ರೀ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಉಮೇಶ್ ಕಲ್ಲಯ್ಯ ಸ್ವಾಮಿ ಅವರು ಮಕ್ಕಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಪಂಕಜ್ ಹಲಪ್ಪಗೋಳ ಅವರು, ಪಂಡಿತ್ ಜವಾಹರಲಾಲ್ ನೆಹರು ಅವರ ಜೀವನ, ಆದರ್ಶಗಳು ಹಾಗೂ ಮಕ್ಕಳ ಮೇಲಿನ ಪ್ರೀತಿಯನ್ನು ಸ್ಮರಿಸಿದರು. “ಮಕ್ಕಳು ದೇಶದ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣದೊಂದಿಗೆ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು” ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಹಾಗೂ ಮನರಂಜನಾ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಮಕ್ಕಳಲ್ಲಿ ಸಂತಸ ಮೂಡಿಸುವುದರ ಜೊತೆಗೆ ಅವರ ಪ್ರತಿಭೆ ಮತ್ತು ಉತ್ಸಾಹಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
